Categories
ರಾಜ್ಯ

ಒಂದನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯ?

ಒಂದನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯ? 
– ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಣಮಟ್ಟ ಕಾಪಾಡಿಕೊಳ್ಳುವ ಉದ್ದೇಶ
– ಪ್ರಾಥಮಿಕ ಶಾಲೆಗಳಲ್ಲಿ ನಲಿ-ಕಲಿಯಲ್ಲಿ ವಿಫಲತೆ

NAMMUR EXPRESS NEWS
ಬೆಂಗಳೂರು : ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಒಂದನೇ ತರಗತಿಯಿಂದಲೇ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ ಸಿಇಆರ್‌ಟಿ) ಪಠ್ಯಪುಸ್ತಕ ಅಳವಡಿಸಿಕೊಳ್ಳಲು ಚಿಂತನೆ ನಡೆಸುತ್ತಿದೆ. ಈ ಸಂಬಂಧ ಇತ್ತೀಚೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ನಲಿ-ಕಲಿ ಯೋಜನೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದನ್ನು ರದ್ದುಗೊಳಿಸಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೇರಿ ಎಲ್ಲ ರಾಜ್ಯ ಪಠ್ಯಕ್ರಮ ಶಾಲೆಗಳಲ್ಲಿ ಜಾರಿಗೆ ತರುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸದ್ಯದಲ್ಲಿಯೇ ಅಂತಿಮ ಆದೇಶ ಹೊರಬೀಳಬಹುದು ಎಂದು ತಿಳಿದು ಬಂದಿದೆ. ಪ್ರಸ್ತುತ 6ರಿಂದ 12ನೇ ತರಗತಿವರೆಗೂ ಎನ್‌ಸಿಇಆರ್‌ಟಿ ಗಣಿತ ಮತ್ತು ವಿಜ್ಞಾನ ಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗಿದೆ.

ಯಾವ ಉದ್ದೇಶದಿಂದ ಬದಲಾವಣೆ?: ಸಾಮಾನ್ಯವಾಗಿ ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಲ್ಲಿ ಎನ್ ಸಿಇಆರ್‌ಟಿ ಪಠ್ಯಪುಸ್ತಕಗಳನ್ನೇ ಬೋಧಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮಕ್ಕೆ ಹೋಲಿಸಿದರೆ, ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳು ನವೀಕರಿಸಿದ ಆವೃತ್ತಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಸಿಇಟಿ, ನೀಟ್, ಜೆಇಇ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳು ಅತ್ಯುನ್ನತ ಬ್ಯಾಂಕ್‌ಗಳನ್ನು ಪಡೆಯುತ್ತಿದ್ದಾರೆ. ನಾಗರಿಕ ಸೇವೆಗಳ ಪರೀಕ್ಷೆ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ನೇಮಕಾತಿ ಪರೀಕ್ಷೆಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮ ಆಧಾರಿತ ಪ್ರಶ್ನೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೇಳಲಾಗುತ್ತದೆ. ಆದ್ದರಿಂದ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ 1ನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮ ಜಾರಿಗೆ ತರಲು ಯೋಚಿಸಲಾಗಿದೆ.

ನಲಿ-ಕಲಿ ವಿಫಲತೆಯೂ ಕಾರಣ : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದು, ಎರಡು ಮತ್ತು ಮೂರನೇ ತರಗತಿ ಮಕ್ಕಳನ್ನು ಒಟ್ಟುಗೂಡಿಸಿ ಬೋಧಿಸುವ ‘ನಲಿ-ಕಲಿ’ ಬಹು ವರ್ಗದ ಬೋಧನಾ ಪದ್ಧತಿಯಿಂದ ಗುಣಮಟ್ಟದ ಶಿಕ್ಷಣಕ್ಕೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈಬಿಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಮಾತ್ರ ನಲಿ-ಕಲಿ ಜಾರಿಗೊಳಿಸಿದೆ. ‘ಮಲ್ಟಿಕ್ಲಾಸ್ ಟೀಚಿಂಗ್’ ಪದ್ಧತಿಯನ್ನು ಒಬ್ಬನೇ ಶಿಕ್ಷಕ ನಿಭಾಯಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈ ಬಿಡಬೇಕೆಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿಯೂ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.