ಧರ್ಮಸ್ಥಳ ಪ್ರಕರಣದಲ್ಲಿ ಯಾರಿಗೂ ಬಗ್ಗಲ್ಲ: ಸಿಎಂ
– ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ
– ಪ್ರತಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಅನುದಾನ
NAMMUR EXPRESS NEWS
ಮೈಸೂರು: ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ, ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
– ಕೃಷ್ಣಾ ನದಿ ಹಂಚಿಕೆ- ಕೇಂದ್ರವಿನ್ನೂ ಅಧಿಸೂಚನೆ ಹೊರಡಿಸಿಲ್ಲ
ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಕೃಷ್ಣಾನದಿ ನೀರು ಹಂಚಿಕೆ ಬಗ್ಗೆ ಕೇಂದ್ರ ಇದುವರೆಗೂ ಅಧಿಸೂಚನೆಯನ್ನು ಹೊರಡಿಸಿಲ್ಲದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆಯೇ ಬಗ್ಗೆ ಪ್ರತಿಕ್ರಿಯೆ ನೀಡಿ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.
– ಶಾಲೆಗಳಿಗೆ ಬಾಂಬ್ ಕರೆ-ಪೊಲೀಸರಿಗೆ ತನಿಖೆ ನಡೆಸಲು ಸೂಚನೆ
ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ, ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.
– ಬಿಜೆಪಿಯವರು ಪ್ರಧಾನಿ ಹುದ್ದೆಯನ್ನು ಪರಿಶಿಷ್ಟ ಜಾತಿಯವರಿಗೆ ಬಿಟ್ಟುಕೊಡಲಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು. ಸಂವಿಧಾನ ಬದ್ದವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದರು.
ಕಾಂಗ್ರೆಸ್ ಎಲ್ಲಾ ಶಾಸಕರಿಗೆ 50 ಕೋಟಿ ಅನುದಾನ
ಕಾಂಗ್ರೆಸ್ ಎಲ್ಲ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ ಸಂಬಂಧ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ.
ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ ಕಾಮಗಾರಿ ಗ್ರಾಮೀಣ ರಸ್ತೆ, ನಗರ ಕಾಮಗಾರಿ ಗಳಿಗೆ 37.5 ಕೋಟಿ ಮೀಸಲು ಇಟ್ಟಿದ್ದು, ಇನ್ನು 12.5 ಕೋಟಿ ಅನುದಾನ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲು ಇಡಲಾಗಿದೆ.