ಬೆಳಗಾವಿಯಲ್ಲಿ ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್!
– 1 ಕೋಟಿ ವೆಚ್ಚದಲ್ಲಿ ಸಿದ್ದರಾಮಯ್ಯ ಪ್ರತಿಮೆ ನಿರ್ಮಾಣ
– ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು..!
NAMMUR EXPRESS NEWS
ಬೆಳಗಾವಿ : ಒಂದೆಡೆ ಸಿಎಂ ಸಿದ್ದರಾಮಯ್ಯ ಹೆಸರು ಮುಡಾ ಹಗರಣದಲ್ಲಿ ಸಿಕ್ಕಿಕೊಂಡಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರು ಲೋಕಾಯುಕ್ತ ತನಿಖೆ ನಡೆಸಿದ್ದಾರೆ. ಅತ್ತ ಇಡಿ ಅಧಿಕಾರಿಗಳೂ ಮುಡಾ ಕೇಸ್ನಲ್ಲಿ ಎಂಟ್ರಿಯಾಗಿ, ತನಿಖೆ ನಡೆಸುತ್ತಿದ್ದಾರೆ. ಇತ್ತ ಬಿಜೆಪಿ, ಜೆಡಿಎಸ್ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದರೆ, ಅವರ ಅಭಿಮಾನಿಗಳು, ಕಾರ್ಯಕರ್ತರು ಮಾತ್ರ ಸಿದ್ದು ಬೆಂಬಲಕ್ಕೆ ನಿಂತಿದ್ದಾರೆ. ಇದರ ನಡುವೆಯೇ ಮೈಸೂರಿನಲ್ಲ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯರ ಹೆಸರು ಇಡೋ ಬಗ್ಗೆ ನಿರ್ಧರಿಸಲಾಗಿತ್ತು. ಇದೀಗ ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್ ನಡೆದಿದೆ ಎಂಬ ಬಗ್ಗೆ ವರದಿಯಾಗಿದೆ!
– ಸಿದ್ದರಾಮಯ್ಯರ 50 ಅಡಿ ಪ್ರತಿಮೆ ನಿರ್ಮಾಣ
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದರಾಮಯ್ಯ ಪ್ರತಿಮೆ ನಿರ್ಮಿಸಲು ಯೋಚಿಸಲಾಗಿದೆ ಅಂತ ಅವರು ತಿಳಿಸಿದ್ದಾರೆ.
– 1 ಕೋಟಿ ವೆಚ್ಚದಲ್ಲಿ ಸಿದ್ದರಾಮಯ್ಯ ಪ್ರತಿಮೆ ನಿರ್ಮಾಣ
ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ 100 ವರ್ಷಗಳ ಹಿಂದೆ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಈ ನೆನಪಿನಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಪ್ರತಿಮೆ ನಿಲ್ಲಿಸಲು ಇದು ಸಕಾಲ. ಅದಕ್ಕಾಗಿ 1 ಕೋಟಿ ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ ಅಂತ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಮಾಹಿತಿ ನೀಡಿದ್ರು.
– ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು!
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ಇಡಲು ಮೈಸೂರು ಮಹಾನಗರ ಪಾಲಿಕೆಯಿಂದ ತೀರ್ಮಾನ ಮಾಡಲಾಗಿದ್ದು, ಇದೀಗ ಪಾಲಿಕೆಯ ಈ ತೀರ್ಮಾನ ವಿವಾದಕ್ಕೆ ಕಾರಣವಾಗಿದೆ. ಯಾವ ರಸ್ತೆಗೆ ಸಿದ್ದರಾಮಯ್ಯ ಹೆಸರು : ಮೈಸೂರಿನ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನ ವೃತ್ತದಿಂದ ಆರಂಭವಾಗುವ ಮೇಟಗಳ್ಳಿಯ ರಾಯಲ್ ಇನ್ ಜಂಕ್ಷನ್ ವರೆಗಿನ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ನಾಮಕರಣ ಮಾಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಈ ಕುರಿತು ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. 22-11-2024 ರಂದು ನಡೆದಿರುವ ಕೌನ್ಸಿಲ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಹಾಗೂ ಸಲಹೆಗಳಿದ್ದರೆ 30 ದಿನಗಳ ಒಳಗೆ ಲಿಖಿತವಾಗಿ ಸಲ್ಲಿಸುವಂತೆ ಪಾಲಿಕೆಯ ಕಾರ್ಯಪಾಲಕ ಅಭಿಯಂತರರಿಂದ ಪ್ರಕಟಣೆ ಹೊರಡಿಸಲಾಗಿದೆ.