ಟಾಪ್ 3 ನ್ಯೂಸ್ ಕರ್ನಾಟಕ
– ಚನ್ನಪಟ್ಟಣ: ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್!
– ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕಕಣಕ್ಕೆ
– ಚನ್ನಪಟ್ಟಣದಲ್ಲಿ ಬೃಹತ್ ಸಭೆ: ಯೋಗೇಶ್ವರ್ ನಾಮಪತ್ರ
– ಚುನಾವಣೆ ನಡುವೆ ರಾಜ್ಯದಲ್ಲಿ 5 ದಿನ ಮಳೆ!
NAMMUR EXPRESS NEWS
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಲಿದ್ದಾರೆ. ಬೆಂಗಳೂರಿನ ಮಾಜಿ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ಮಾಡಿದ್ದಾರೆ.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಬೃಹತ್ ಸಭೆ: ಯೋಗೇಶ್ವರ್ ನಾಮಪತ್ರ
ರಾಮನಗರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಸಿ ಪಿ ಯೋಗೀಶ್ವರ್ ಅವರು ನವೆಂಬರ್ 13ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಸಿಪಿ ಯೋಗೇಶ್ವರ್ ಅವರಿಗೆ ಸಾಥ್ ನೀಡಿದರು.
ಯೋಗೀಶ್ವರ್ ಅವರು ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರೊಂದಿಗೆ ಒಂದೂವರೆ ಕಿಲೋ ಮೀಟರ್ ಬೃಹತ್ ರೋಡ್ ಶೋ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ!
ಬೆಂಗಳೂರು: ಇಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ, ದಾವಣಗೆರೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯ ವರದಿ ಸಂಬಂಧ ಮಾಹಿತಿ ನೀಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ ಎಂದು ಹೇಳಿದ್ದಾರೆ. ಇನ್ನು 5 ದಿನ ಬೆಂಗಳೂರಲ್ಲಿ ಮಳೆ ಆಗಲಿದೆ.