ಟಾಪ್ ನ್ಯೂಸ್ ಕರ್ನಾಟಕ
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ
– ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ
– ಭಾರೀ ಮಳೆಗೆ ಬೆಂಗಳೂರು ತತ್ತರ: ರಜೆ ಘೋಷಣೆ
NAMMUR EXPRESS NEWS
ಬೆಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲೆಗಳು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್, ಬೆಂಗಳೂರಿನ ಎಲ್ಲಾ ಶಾಲೆ, ಪ್ರಾಥಮಿಕ ಕೇಂದ್ರಗಳು, ಅಂಗನವಾಡಿಗಳಿಗೆ ಅಕ್ಟೋಬರ್ 16ರಂದು ರಜೆ ಘೋಷಿಸಿದ್ದಾರೆ. ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಕೆಲ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮರು ಪರೀಕ್ಷೆ ನಿಗದಿ ಕಷ್ಟವಾಗಿರುವುದರಿಂದ ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ವಿವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ಹಾಗೂ ವಿದ್ಯುತ್ ಕಂಬ, ತಂತಿ ಮೊದಲಾದ ಅಪಾಯಗಳ ಬಗ್ಗೆ ಜಾಗೃತವಾಗಿರುವಂತೆ ಸೂಚಿಸಿದ್ದಾರೆ.
– ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ
ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ಲೋಕಸಭಾ ಚುನಾವಣೆಯ ನಂತರ ತೆರವಾಗಿದ್ದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13 ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚನ್ನಪಟ್ಟಣ, ಸಂಸದರಾದ ಬಳಿಕ ಬೊಮ್ಮಾಯಿ ಅವರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ತೆರವಾದ ಸ್ಥಾನಕ್ಕೆ ಹಾಗೂ ಈ.ತುಕಾರಾಂ ಅವರ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಚುನಾವಣಾ ಆಯೋಗ ಹೊರಡಿಸಿದ ಮಾಹಿತಿಯಂತೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸಂಬಂಧ ದಿನಾಂಕ 18-10-2024ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ದಿನಾಂಕ 25-10-2024ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 28-10-2024ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 30-10-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ಮತದಾನ ನಡೆಯಲಿದೆ. ದಿನಾಂಕ 23-11-2024ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 25-11-2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.