Categories
ತೀರ್ಥಹಳ್ಳಿ

ಡಿ.ಬಿ.ಚಂದ್ರೆಗೌಡ ಇನ್ನು ನೆನಪು ಮಾತ್ರ!

ಡಿ. ಬಿ. ಸಿ ಇನ್ನು ನೆನಪು ಮಾತ್ರ!
– ತೀವ್ರ ಅನಾರೋಗ್ಯದಿಂದ ಡಿ.ಬಿ.ಚಂದ್ರೆಗೌಡ ಇನ್ನಿಲ್ಲ
– ಮೂಡಿಗೆರೆ ನಿವಾಸದ ಬಳಿ ನಾಳೆ ಅಂತ್ಯಕ್ರಿಯೆ
– ತೀರ್ಥಹಳ್ಳಿ, ಶೃಂಗೇರಿ ಶಾಸಕರಾಗಿದ್ದ ಡಿಬಿಸಿ

NAMMUR EXPRESS NEWS
ತೀರ್ಥಹಳ್ಳಿ: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಅವರು ಸೋಮವಾರ 12.20ಕ್ಕೆ ಮೂಡಿಗೆರೆಯ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮಲೆನಾಡು, ಬೆಂಗಳೂರು ಪ್ರಮುಖ ನಾಯಕರಾಗಿದ್ದು, ಎಲ್ಲೆಡೆ ಕಂಬನಿ ವ್ಯಕ್ತವಾಗಿದೆ.
ಶೃಂಗೇರಿ, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾಗಿದ್ದು, ಲೋಕ ಸಭೆ ಸದಸ್ಯರಾಗಿದ್ದು, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದರು. ಡಿ.ಬಿ.ಚಂದ್ರೇಗೌಡರು ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ಸಾಧನೆ ಮಾಡಿದ್ದರು.

ವಕೀಲರಾಗಿ ರಾಜಕಾರಣಿ

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿ ನಿರತರಾಗಿದ್ದರು. ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು, 1977ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ದೇಶದಲ್ಲೇ ಹೆಸರು ಮಾಡಿದ್ದರು.

1983, 87ರಲ್ಲಿ ತೀರ್ಥಹಳ್ಳಿ ಶಾಸಕರಾಗಿದ್ದರು!

ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು.

ಶೃಂಗೇರಿ ಕ್ಷೇತ್ರದ ಶಾಸಕರಾಗಿ ಸೇವೆ

1999ರಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ 1999 ರಿಂದ 2004ರ ವರೆಗೆ ಎಸ್.ಎಂ. ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2009ರಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಪೂರ್ಣ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಮಂಗಳವಾರ ಮುಂಜಾನೆ ತಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ತಮ್ಮ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.