ತೀರ್ಥಹಳ್ಳಿಯಲ್ಲಿ ಭಾರೀ ಮಳೆ!
– ಬಿಸಿಲಿನ ಬೇಗೆಗೆ ತಂಪೆರೆದ ಮಳೆ: ಹಲವೆಡೆ ಮಳೆ ಇಲ್ಲ
– ತುಂಗಾ ನದಿ ನೀರು ಕೊಂಚ ಏರಿಕೆ
NAMMUR EXPRESS NEWS
ತೀರ್ಥಹಳ್ಳಿ: ಬಿಸಿಲಿನ ಬೇಗೆಗೆ ಬಸವಳಿದ ಜನರಿಗೆ ವರುಣದೇವ ಖುಷಿ ನೀಡಿದ್ದಾನೆ. ತಾಲೂಕಿನ ಹಲವೆಡೆ ಉತ್ತಮ ಮಳೆ ಸುರಿದಿದೆ. ತುಂಗಾ ನದಿ ಸೇರಿ ಹಳ್ಳ, ಕೆರೆ ನೀರು ಕಳೆದೊಂದು ವಾರದಲ್ಲಿ ಕೊಂಚ ಏರಿಕೆ ಆಗಿದೆ. ಶೃಂಗೇರಿ, ಕೊಪ್ಪ ಭಾಗದಲ್ಲಿ ಇತ್ತೀಚಿಗೆ ಉತ್ತಮ ಮಳೆಯಾಗುತ್ತಿದೆ.
ಮೇ 18ರ ವರೆಗೆ ಮಳೆ ಸಾಧ್ಯತೆ
ಮೇ 18ರವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.
ಶೃಂಗೇರಿಯಲ್ಲಿ ಭಾರೀ ಮಳೆ!
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿದು ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ.
