*ಅಂಬಲಪಾಡಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು*
ಉಡುಪಿ: ಹದಿನಾಲ್ಕು ಚಕ್ರಗಳ ಬೃಹತ್ ಗಾತ್ರದ ಟ್ರಕ್ ಹರಿದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ದೆಂದೂರುಕಟ್ಟೆಯ ಪ್ರದೀಪ (38) ಎಂದು ಗುರುತಿಸಲಾಗಿದೆ. ಮಾಹಿತಿಯಂತೆ, ವೇಗವಾಗಿ ಬರುತ್ತಿದ್ದ ಟ್ರಕ್ ಒಂದು ಎದುರುಗಡೆಯಿಂದ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಎಳೆದ ಪರಿಣಾಮ ಈ ದುರಂತ ಸಂಭವಿಸಿದೆ. ತೀವ್ರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆಂದು ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಶವಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಸಾಮಾನ್ಯ ಸ್ಥಿತಿಗೆ ಮರಳಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.