ಹಂತಕನಿಗೆ ಕೋರ್ಟ್ ಜಾಮೀನಿಲ್ಲ!
– ಉಡುಪಿಯ ನಾಲ್ವರ ಹತ್ಯೆ ಕೇಸ್: ಆರೋಪಿಗೆ ಜಾಮೀನು ತಿರಸ್ಕಾರ
– ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹಂತಕ
NAMMUR EXPRESS NEWS
ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿಯನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದೆ. ಮಾ.13ರಂದು ಜಾಮೀನು ಕೋರಿ ಚೌಗುಲೆಯು ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸರ್ಕಾರಿ ಅಭಿಯೋಜಕರಾದ ಶಿವಪ್ರಸಾದ್ ಹೆಗ್ಡೆ ಅವರು ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನನ್ನು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ.
ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆಯನ್ನು ಮೂರು ದಿನಗಳ ಹಿಂದೆ ಉಡುಪಿಯ 2ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಆವರಣದಲ್ಲಿಯೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ವಿಚಾರಣೆ ವೇಳೆ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತು.
ಈ ಮೊದಲು ಅಂದರೆ ಕಳೆದ ಡಿಸೆಂಬರ್ನಲ್ಲಿ ಕೂಡ ಪ್ರವೀಣ್ ಚೌಗುಲೆಯು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆಗ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯಲ್ಲಿ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳಿಂದ ಆರೋಪಿ ಅಪರಾಧ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ ಈ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷ್ಯಗಳು ಕೂಡ ಇರುವ ಕಾರಣ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.