- ಜಿಪಂ ಸದಸ್ಯನ ಕೊಲೆ ಪ್ರಕರಣದ ತನಿಖೆ
- ಸಿಬಿಐ ಅಧಿಕಾರಿಗಳಿಂದ ನಾಯಕನ ವಿಚಾರಣೆ
ಹುಬ್ಬಳ್ಳಿ: ರಾಜ್ಯದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಅವರ ಸಹೋದರನ ಸಿಬಿಐ ವಿಚಾರಣೆ ಭಾರೀ ಕುತೂಹಲ ಮೂಡಿಸಿದೆ. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಒಂದೆಡೆ ವಿಚಾರಣೆ ನಡೆಯುತ್ತಿದ್ದರೆ ಇನ್ನೊಂದೆಡೆ ಹೊರಗೆ ಪ್ರತಿಭಟನೆ ನಡೆಯುತ್ತಿದೆ.
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಮಾತನಾಡಿ, ಸಿಬಿಐ ರಾಜಕೀಯ ದಾಳವಾಗಬಾರದು ಎಂದು ಪ್ರತಿಕ್ರಿಯಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಗುರುವಾರ ಬೆಳಗ್ಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಧಾರವಾಡದ ಬರಾಕೂಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಕೂಡ ವಶಕ್ಕೆ ಪಡೆದಿದ್ದಾರೆ. ಈ ವಿಷಯ ರಾಜ್ಯ ಮಟ್ಟದಲ್ಲಿ ಭಾರೀ ಸುದ್ದಿ ಮಾಡಿದೆ. ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದ್ದು, ಧಾರವಾಡದ ಉಪನಗರ ಪೆÇಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು.
ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಜಗದೀಶ್ ಶೆಟ್ಟರ್, ಕಾನೂನು ಪ್ರಕಾರ ಸಿಬಿಐ ವಿಚಾರಣೆ ನಡೆಯುತ್ತಿದೆ. ಇದಕ್ಕಿಂತ ಹೆಚ್ಚು ಹೇಳಲು ಸಾಧ್ಯ ಇಲ್ಲ ಎಂದಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಸಭೆ ನಡೆಸಲು ಸಜ್ಜಾಗಿರುವ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಬಿಐನ ಕ್ರಮ ರಾಜಕೀಯ ಪ್ರೇರಿತ ಎಂಬ ಟೀಕೆಯನ್ನು ತಳ್ಳಿ ಹಾಕಿದ್ದಾರೆ. ಯೋಗೇಶ್ ಗೌಡ ಕೊಲೆಯಾದಾಗ ತನಿಖೆ ನಡೆಸುವಂತೆ ಬಿಜೆಪಿ ಆಗಲೇ ಆಗ್ರಹಿಸಿತ್ತು. ಅವರ ಮನೆ, ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಒತ್ತಾಯವಾಗಿತ್ತು. ಈಗ ಎಲ್ಲಾ ತನಿಖೆ ಪರಿಶೀಲನೆ ಬಳಕ ಸಿಬಿಐ ಕಾನೂನು ಕ್ರಮ ಕೈಗೊಂಡಿದೆ ಎಂದಿದ್ದಾರೆ. ಇಬ್ಬರನ್ನೂ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ ಆಗ ಪೊಲೀಸ್ ಅಧಿಕಾರಿಯಾಗಿದ್ದವರಿಗೂ ಉರುಳು ಬಿದ್ದಿದೆ. ಇಬ್ಬರಿಗೂ ಬಂಧನದ ಭೀತಿ ಎದುರಾಗಿದೆ.