ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಮಳೆಯಾಗದ ಕಾರಣದಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳು ಬರಪೀಡಿತ ಪ್ರದೇಶಗಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಲೆನಾಡು, ಬಯಲು ಸೀಮೆ ಕೂಡ ಈ ಬಾರಿ ಮಳೆ ಹಿನ್ನಡೆ ಕಂಡಿದೆ. ಬತ್ತದ ಗದ್ದೆಗಳು, ಕೃಷಿ ಭೂಮಿ ಒಣಗುತ್ತಿದೆ. ಈ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳಿಗೆ ಆರ್ಥಿಕ ನೆರವು ನೀಡಲು ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ರೈತರ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಣಯ ಕೈಗೊಂಡಿದೆ.
ಹೊಸ ಪಟ್ಟಿಯಲ್ಲಿ ಸೇರ್ಪಡೆಯಾದ ತಾಲೂಕುಗಳು: ರಾಜ್ಯ ಸರ್ಕಾರವು ಬರದ ಪಟ್ಟಿಯಲ್ಲಿ ಹೊಸದಾಗಿ ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ ಚಡಚಣ, ಕಲಘಟಗಿ, ಕುಂದಗೋಳ, ಅಳ್ಳಾವರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲ, ಭಟ್ಕಳ, ಹಳಿಯಾಳ, ಶಿರಸಿ ಸೇರಿ ಒಟ್ಟು 29 ತಾಲ್ಲೂಕುಗಳನ್ನು ಸೇರ್ಪಡೆಗೊಳಿಸಿದೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಗಾಲ ಆಗಿರುವುದರಿಂದ ಶಿವಮೊಗ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಿಎಂಗೆ ಪತ್ರ ಬರೆದಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರ, ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದ್ದು ರೈತರ ಭಕ್ತ, ಜೋಳ, ಶುಂಠಿ, ಕಬ್ಬು ಬೆಳೆಗಳಿಗೆ ನೀರಿಲ್ಲದೇ ಒಣಗುತ್ತಿವೆ. ಈ ಬಾರಿ ಈ ಬೆಳೆಗಳು ರೈತರಿಗೆ ಲಭಿಸುವುದು ದುರ್ಲಭವಾಗಿದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕಾಗಿ ಮನವಿ ಮಾಡಿದ್ದು ಇದೀಗ ಪೂರಕ ಸ್ಪಂದನೆ ವ್ಯಕ್ತವಾಗಿದೆ







