ಶಿವಮೊಗ್ಗ/ ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಸಿ.ಯೋಗೇಶ್ ನೇಮಕವಾಗಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾಗಿ ಎಚ್.ಪಿ.ಮಂಜೇಗೌಡ ಆಯ್ಕೆ ಆಗಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪಟ್ಟಿಯನ್ನು ಪ್ರಕಟಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿದೆ.
ಶಿವಮೊಗ್ಗ ಜಿಲ್ಲೆಗೆ ಯುವ ನಾಯಕತ್ವ: ಯೋಗೀಶ್ ಆಯ್ಕೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎಚ್.ಸಿ.ಯೋಗೇಶ್ ಅವರು ನೇಮಕಗೊಂಡಿದ್ದಾರೆ. ಇವರು 2023ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯಾಗಿದ್ದು, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಎಂದೆಂದಿಗಿಂತಲೂ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿದ್ದು ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಮಾಜಿ ಸಂಸದರಾದ ಆಯನೂರು ಮಂಜುನಾಥ್, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್.ಸುಂದರೇಶ್, ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್.ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆಯಾದ ವೇದಾ ವಿಜಯ್ ಕುಮಾರ್, ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮತ್ತು ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿಜಯಲಕ್ಷ್ಮೀ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ನಾಯಕರ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಅಂತಿಮ ಸುತ್ತಿನಲ್ಲಿ ಪಕ್ಷದ ಹೈಕಮಾಂಡ್ ಎಚ್.ಸಿ.ಯೋಗೇಶ್ ಅವರನ್ನು ಆಯ್ಕೆ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ತಳ ಮಟ್ಟದ ಪಕ್ಷ ಸಂಘಟಕನಿಗೆ ಒಲಿದ ಹುದ್ದೆ!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಎಚ್.ಪಿ.ಮಂಜೇಗೌಡ ಅವರು ಆಯ್ಕೆಯಾಗಿದ್ದಾರೆ. ಪಕ್ಷದ ಹೈಕಮಾಂಡ್ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವೀಕ್ಷಕರ ವರದಿಯನ್ನು ಆಧರಿಸಿ ಎಚ್.ಪಿ.ಮಂಜೇಗೌಡ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಬೀಕನಹಳ್ಳಿ ಗ್ರಾಮದವರು, ಕುರುಬ ಸಮುದಾಯದವರಾದ ಎಚ್.ಪಿ.ಮಂಜೇಗೌಡ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದು, ಬೀಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಬೀಕನಹಳ್ಳಿ ಸೊಸೈಟಿಯ ಸದಸ್ಯರೂ ಆಗಿ ಸೇವೆ ಸಲ್ಲಿಸುವುದರ ಜೊತೆಗೆ ಜಿಲ್ಲಾ ಮತ್ತು ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿಯ ರಾಜಕೀಯದಿಂದ ಹಿಡಿದು ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ. ಉತ್ತಮ ವಾಗ್ಮಿ ಮತ್ತು ಸಂಘಟನಾ ಚತುರರಾಗಿರುವ ಎಚ್.ಪಿ.ಮಂಜೇಗೌಡ ಅವರ ಆಯ್ಕೆಯು ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ಕ್ಷೇತ್ರಗಳ ಸಮುದಾಯದ ಸಂಘಟನೆಗೂ ಮತ್ತಷ್ಟು ಸಹಕಾರಿಯಾಗಲಿದೆ ಎನ್ನುವ ಅಭಿಪ್ರಾಯಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.







