Categories
Uncategorized

ಪಿಯು ವಿದ್ಯಾರ್ಥಿಗಳಿಗೂ ಉಚಿತ ಪಠ್ಯ ಪುಸ್ತಕ! – ಜಿಪಂ ಸಿಇಒಗಳಿಗೆ ಎರಡು ದಿನ ಗ್ರಾಮ ಭೇಟಿ ಕಡ್ಡಾಯ – ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಗ್ರಾಮೀಣ ಸರ್ಕಾರಿ ವಿದ್ಯಾರ್ಥಿಗಳಿಗೆ ಮೀಸಲು

ಬೆಂಗಳೂರು: ಹಲವಾರು ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಸರ್ಕಾರದಿಂದ ಉಚಿತವಾಗಿ ವಿತರಿಸುವ ನಿಯಮ ಜಾರಿಯಲ್ಲಿತ್ತು. ಇನ್ನು ಮುಂದೆ ಇವುಗಳ ಜೊತೆಗೆ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕಗಳನ್ನು ಉಚಿತವಾಗಿ ಸರಬರಾಜು ಮಾಡಬೇಕೆನ್ನುವ ಕುರಿತು ರಾಜ್ಯ ಸರ್ಕಾರವು ನಿರ್ಧಾರವನ್ನು ಕೈಗೊಂಡಿದೆ. ರಾಜ್ಯದ ಇತಿಹಾಸದಲ್ಲೇ ಇದು ಮೊದಲ ಪ್ರಯತ್ನವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ಧಿಗಾರರೊಂದಿಗೆ ಮಾತನಾಡಿದ ರಾಜ್ಯದ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು “ಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಳವಾಗಿದ್ದರಿಂದ ಪಠ್ಯಪುಸ್ತಕ ಪೂರೈಕೆಯಲ್ಲಿ ಅಲ್ಪಪ್ರಮಾಣದ ವ್ಯತ್ಯಯ ಉಂಟಾಗಿದೆ. ಅತಿ ಶೀಘ್ರದಲ್ಲೇ ಈ ಸಮಸ್ಯೆ ಪರಿಹಾರವಾಗಲಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್ ಗಳನ್ನು ಒದಗಿಸಲು ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಹಾಗೇ ಈ ವರ್ಷದಿಂದಲೇ ಉಚಿತ ನೋಟ್ ಬುಕ್ ವಿತರಿಸಲಾಗುತ್ತಿದ್ದು, ಗ್ರಾಮೀಣ ಮಕ್ಕಳಿಗೆ ನಗರ ಜೀವನವನ್ನು ಪರಿಚಯಿಸುವ ಸಲುವಾಗಿ ವಿನೂತನ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ. ಅದನ್ನೂ ಕೂಡ ಶೀಘ್ರದಲ್ಲೇ ಅನುಷ್ಠಾನಗೊಳಿಸಲಾಗುವುದು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳ ರಾಜ್ಯಮಟ್ಟದ ಉದ್ಘಾಟನೆಯ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲೇ ನಡೆಸಲಾಗುವುದು” ಎಂದು ತಿಳಿಸಿದರು.

ಜಿಪಂ ಸಿಇಒಗಳಿಗೆ ಎರಡು ದಿನ ಗ್ರಾಮ ಭೇಟಿ ಕಡ್ಡಾಯ

ಬೆಂಗಳೂರು: ಜಿಲ್ಲಾ ಪಂಚಾಯಿತಿಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿದ್ದು, ಇದರ ಪ್ರಕಾರ ಅವರು ವಾರದಲ್ಲಿ ಕನಿಷ್ಠ ಎರಡು ದಿನಗಳ ಕಾಲ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಬೇಕಿದೆ. ಅಷ್ಟೇ ಅಲ್ಲದೆ ಗ್ರಾಮ ಪಂಚಾಯಿತಿಗಳಿಗೂ ತೆರಳಿ ಪರಿಶೀಲನೆಯನ್ನು ನಡೆಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಖಂಡ್ರೆ ಅವರು ಸೂಚನೆಯನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಲಿಖಿತ ರೂಪದ ಆದೇಶವನ್ನು ನೀಡಿದ್ದು, ಇವುಗಳೊಂದಿಗೆ ಗ್ರಾಮ ಪಂಚಾಯಿತಿಗಳಿಗೆ ಪೂರ್ವ ಮಾಹಿತಿ ನೀಡದೆ ಭೇಟಿ ನೀಡಬೇಕು, ಪಿಡಿಒ ಮತ್ತು ತಾಲ್ಲೂಕು ಇಒಗಳ ಕಾರ್ಯವೈಖರಿಯನ್ನು ಅವರ ಹಾಜರಾತಿಯನ್ನು ಪರಾಮರ್ಶಿಸಬೇಕು, ಹಾಗೆಯೇ ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಇತ್ಯರ್ಥವಾಗುವಂತಹ ಸಮಸ್ಯೆಗಳಿದ್ದರೆ ಅವುಗಳನ್ನು ಕೂಡಲೇ ಅಲ್ಲಿಯೇ ಪರಿಹರಿಸಬೇಕು ಎಂದು ಈ ಮೂಲಕ ತಿಳಿಸಿದ್ದಾರೆ.

ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಗ್ರಾಮೀಣ ಸರ್ಕಾರಿ ವಿದ್ಯಾರ್ಥಿಗಳಿಗೆ ಮೀಸಲು

ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ನಿಯಮಗಳು 2006ಕ್ಕೆ ಹೊಸ ತಿದ್ದುಪಡಿ ತರಲು ನಿರ್ಣಯ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಇದರ ಪ್ರಕಾರ ವೃತ್ತಿಪರ ಕೋರ್ಸ್ ಗಳ ಸರ್ಕಾರಿ ಸೀಟುಗಳಲ್ಲಿ ಶೇಕಡ 15ರಷ್ಟು ಭಾಗವನ್ನು ಗ್ರಾಮೀಣ ಮೀಸಲಾತಿಗೆ ನಿಗದಿಪಡಿಸಲಾಗಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭಿಸಿದೆ. ಇದರ ಮತ್ತೊಂದು ವಿಶೇಷವೆಂದರೆ ಶೇಕಡ 15ರಷ್ಟು ಮೀಸಲಾತಿಯನ್ನು ಮತ್ತಷ್ಟು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಸಲುವಾಗಿ ಎರಡು ಭಾಗಗಳನ್ನಾಗಿ ವಿಂಗಡಿಸಲಾಗಿದೆ. ಅದರಲ್ಲಿ ಶೇಕಡ 7.5ರಷ್ಟು ಸೀಟುಗಳನ್ನು ಪ್ರತ್ಯೇಕವಾಗಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಕಾಯ್ದಿರಿಸಲು ನಿರ್ಧರಿಸಲಾಗಿದೆ. ಅಂದರೆ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಶಾಲಾ ಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿರುವಂತಹ ಗ್ರಾಮೀಣ ಭಾಗದ ಅರ್ಹ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ನಿಯಮವನ್ನು ತಿದ್ದುಪಡಿ ಮಾಡಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.