ಕರಾವಳಿಯಾದ್ಯಂತ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ
– ದ. ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ
– ಬೆಳಗ್ಗೆಯಿಂದಲೇ ಸುರಿಯುತ್ತಿದೆ ಧಾರಾಕಾರ ಮಳೆ
NAMMUR EXPRESS NEWS
ಮಂಗಳೂರು: ಭಾರೀ ಮಳೆಯ ಮುನ್ಸೂಚನೆಯಾಗಿ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ, ಮೇ. 19ರ ರಾತ್ರಿಯಿಂದಲೇ ಕರಾವಳಿಯಾದ್ಯಂತ ಭಾರೀ ವರ್ಷಧಾರೆಯಾಗಿದೆ. ನಿನ್ನೆಯಿಂದಲೇ ಪ್ರಾರಂಭವಾಗಿದ್ದ ಮಳೆ ಇವತ್ತು ಬಿರುಸು ಪಡೆದುಕೊಂಡಿದ್ದು ಬೆಳಗ್ಗೆಯಿಂದಲೇ ಸುರಿಯುತ್ತಿದೆ.
ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬಿರುಗಾಳಿಯ ಹೊಡೆತಕ್ಕೆ ಮರಗಳು ಧರೆಗುರುಳಿವೆ.
ಭಾರೀ ಗಾಳಿ ಮಳೆ ಬರುವ ಸಾಧ್ಯತೆ ಇರುವುದರಿಂದ, ಮೀನುಗಾರರಿಗೆ ಸಮುದ್ರಕ್ಕೆ ತೆರಳಬಾರದೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಅಲ್ಲದೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ನಾಗರಿಕರಿಗೆ ಸೂಚಿಸಲಾಗಿದೆ.
ಮೇ 22 ರ ವರೆಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೇ 21, 22 ರ ವರೆಗೂ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗಲಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ, ಹಾಗೂ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಿಳಿಸಿದೆ.
