ಬೆಂಗಳೂರು: ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಯ ಅವದೂತರಾದ ವಿನಯ್ ಗುರೂಜಿ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಶುಭಾಶಯಗಳನ್ನು ಕೋರಿ ಆಶೀರ್ವದಿಸಿದ್ದಾರೆ. ಈ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ರಾಜ್ಯದ ಅದರಲ್ಲೂ ಮುಖ್ಯವಾಗಿ ಮಲೆನಾಡು ಭಾಗದ ರೈತರ ಜ್ವಲಂತ ಸಮಸ್ಯೆಗಳ ಕುರಿತು ಡಿ.ಕೆ.ಶಿವಕುಮಾರ್ ಅವರಲ್ಲಿ ಚರ್ಚೆ ನಡೆಸಿದ್ದಾರೆ.
ಮಲೆನಾಡು ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಗಳು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶೀಘ್ರವೇ ಶಾಶ್ವತ ಪರಿಹಾರವನ್ನು ಒದಗಿಸುವಂತೆ ಕೋರಿದ್ದಾರೆ. ಇದರೊಂದಿಗೆ ರಾಜ್ಯದ ಪ್ರತಿಯೊಂದು ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಮತ್ತು ಉಚಿತ ಸೇವೆ ದೊರಕುವಂತೆ ಮಾಡಲು ನೂರು ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವಂತೆ, ರಾಜ್ಯದ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣವೇ ಕೈಗೊಳ್ಳಬೇಕಾದಂತಹ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸಿ ಅಂತಿಮವಾಗಿ ಮನವಿ ಪತ್ರವನ್ನು ಕೂಡ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ವಿನಯ್ ಗುರೂಜಿ ಅವರಿಂದ ಮನವಿ ಪತ್ರವನ್ನು ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಈ ವಿಚಾರದ ಕುರಿತು ಧನಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆಯನ್ನು ಕೂಡ ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಟ್ರಸ್ಟಿಗಳಾದ ಮಣಿ ಹೆಗಡೆ ಮತ್ತು ಕೃಷ್ಣ ಕೋಡೆ ಅವರು ಜೊತೆಗಿದ್ದರು.







