ಕೊಪ್ಪ: ಖಾಸಗಿ ವಿಡಿಯೋ ಇಟ್ಟುಕೊಂಡು ಆಟವಾಡಿಸಿದ ಕಾರಣಕ್ಕಾಗಿ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಕೊಪ್ಪ ತಾಲೂಕಲ್ಲಿ ಘಟನೆ ನಡೆದಿದೆ.
ವ್ಯಕ್ತಿಯೊಬ್ಬ ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು, ಬಳಿಕ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾನೆ ಎನ್ನಲಾಗಿದೆ. ನಂತರ ಹಣವನ್ನು ನೀಡದಿದ್ದರೆ ಆಕೆಯ ಖಾಸಗಿ ವಿಡಿಯೋಗಳನ್ನು ಕುಟುಂಬಸ್ಥರಿಗೆ ಕಳುಹಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಮಾನಸಿಕವಾಗಿ ನೊಂದ ಯುವತಿಯು ಸೆಪ್ಟೆಂಬರ್ 23ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ.
ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ: ಕೊನೆಯುಸಿರು!
ಯುವತಿಯನ್ನು ಕೊಪ್ಪ, ಮೂಡಿಗೆರೆ ಮತ್ತು ಚಿಕ್ಕಮಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು . ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿಯು ಮೃತಪಟ್ಟಿದ್ದು, ಆಕೆಯ ಪೋಷಕರು ತಮ್ಮ ಮಗಳ ಸಾವಿಗೆ ಅರುಣ್ ಮತ್ತು ಮನೋಜ್ ಕಾರಣವೆಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆಯನ್ನು ಕೈಗೊಂಡಿದ್ದಾರೆ.







