ಬೆಂಗಳೂರು: ಹೊಸ ವರ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆ ನಿಗದಿಯಾಗುವ ಸಾಧ್ಯತೆ ಇದೆ. ಚುನಾವಣಾ ಮೀಸಲಾತಿ ಕರಡು ಸಿದ್ಧವಾಗಿದ್ದು ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ಮೊದಲಿಗೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಬಳಿಕ ಗ್ರಾಮ ಪಂಚಾಯತ್ ಚುನಾವಣೆಗೂ ಸಿದ್ಧತೆ ಆಗಲಿದೆ.
ಚುನಾವಣೆಗೆ ಕ್ಯಾಬಿನೆಟ್ ನಿರ್ಧಾರ!
ಅಕ್ಟೋಬರ್ 6ರ ಮಂಗಳವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈಗಾಗಲೇ ಚುನಾವಣಾ ಮೀಸಲಾತಿ ಕರಡು ಸಿದ್ಧಗೊಂಡಿದ್ದು, ಚುನಾವಣಾ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲಿ ಮತ್ತಷ್ಟು ಚುರುಕುಗೊಳಿಸಲು ಕ್ಯಾಬಿನೆಟ್ ನಿರ್ಧರಿಸಿದೆ ಎನ್ನುವ ಮಾಹಿತಿ ಲಭಿಸಿದೆ.
ಸಂಕ್ರಾಂತಿ ವೇಳೆಗೆ ಚುನಾವಣೆ… ಡಿಸೆಂಬರ್ ಅಲ್ಲಿ ಘೋಷಣೆ
ರಾಜ್ಯ ಸರ್ಕಾರವು ಮೊದಲಿಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ನಡೆಸಲು ನಿರ್ಣಯಿಸಿದ್ದು, ಬಳಿಕ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸುವ ಕುರಿತು ಚಿಂತನೆ ನಡೆಸಿದೆ. ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನುವ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಇದರಲ್ಲಿ ಕೊಂಚ ಬದಲಾವಣೆಯಾಗಿದ್ದು, ಜನವರಿ ತಿಂಗಳ ಮೊದಲ ವಾರದಲ್ಲಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಮೊದಲಿಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳು ನಡೆದ ಬಳಿಕವಷ್ಟೇ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸಲಾಗುವುದು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದಕ್ಕೆ ಸಂಬಂಧಿಸಿದಂತೆ ಡಿಸೆಂಬರ್ ತಿಂಗಳಿನಲ್ಲಿ ಅಧಿಸೂಚನೆ ಹಾಗೂ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.







