ಮುಂಗಾರು ಮಳೆಯೇ ಏನು ನಿನ್ನ ಲೀಲೆ..!’
– ರಾಜ್ಯದಲ್ಲಿ5 ದಿನ ಭಾರೀ ಮಳೆ ಅಲರ್ಟ್!
– ಕೃಷಿ ಚಟುವಟಿಕೆ ಚುರುಕು: ತುಂಬಿದ ನದಿಗಳು
– ಉತ್ತಮ ಮಳೆ, ಜಲಾಶಯಗಳಿಗೆ ಜೀವಕಳೆ
NAMMUR EXPRESS NEWS
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ವ್ಯಾಪಕ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಇನ್ನು ಕಳೆದ ವರ್ಷ ತೀವ್ರ ಮಳೆಯ ಕೊರತೆಯಿಂದ ಬತ್ತಿ ಹೋಗಿದ್ದ ಜಲಾಶಯಗಳು, ಈ ವರ್ಷ ಸುರಿಯುತ್ತಿರುವ ಮಳೆಗೆ ಮೈದುಂಬಿವೆ. ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜಲಾಶಯಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜೂನ್ 2ರಂದು ರಾಜ್ಯಕ್ಕೆ ಮುಂಗಾರು ಆಗಮಿಸಿದ್ದು, 145 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಗಿಂತ ಶೇ 6ರಷ್ಟು ಅಧಿಕ ಮಳೆ ಬಿದ್ದಿದೆ. ಇದರಿಂದ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 16 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನು 5 ದಿನ ಬಾರಿ ಮಳೆ ಎಚ್ಚರಿಕೆ.!
ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.