ಮಳೆ ಅಲರ್ಟ್: ಎಚ್ಚರ ಎಚ್ಚರ!
– ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ
– 40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ
NAMMUR EXPRESS NEWS
ಬೆಂಗಳೂರು: ಬುಧವಾರ ಕರ್ನಾಟಕದ ಕರಾವಳಿಯಲ್ಲಿ ಮಳೆಯು ಅಬ್ಬರಿಸಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.
ಬೆಂಗಳೂರಿನಲ್ಲೂ ಸಾಧಾರಣ ಮಳೆ!
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ!
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.